ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯಲಿರುವ ಆಳ್ವಾಸ್ ಪ್ರಗತಿ–2026ರ 16ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳವು ಆಗಸ್ಟ್ 7ರಂದು ಬೆಳಿಗ್ಗೆ 9.30ರಿಂದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆಯಲಿದ್ದು, 350ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. 26,300ಕ್ಕೂ ಅಧಿಕ ಉದ್ಯೋಗಾವಕಾಶಗಳಿಗೆ ಅಭ್ಯರ್ಥಿಗಳಿಂದ ಆನ್‌ಲೈನ್ ನೋಂದಣಿ ಆಹ್ವಾನಿಸಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಉದ್ಯೋಗಾಕಾಂಕ್ಷಿಗಳಿಗೆ ಒಂದೇ ವೇದಿಕೆಯಲ್ಲಿ ಉದ್ಯೋಗದಾತರನ್ನು ಭೇಟಿ ಮಾಡಿ ನೇರ ಸಂದರ್ಶನದಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸುವ ಉದ್ದೇಶದಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಪ್ರಗತಿ ಆರಂಭದ ವರ್ಷಗಳಲ್ಲಿ ಶ್ರಮಿಸಿದ ಮಹೇಶ್ ಶೆಬಿ ಅವರಿಗೆ ಈ ಬಾರಿಯ ಉದ್ಯೋಗ ಮೇಳವನ್ನು ಗೌರವಪೂರ್ವಕವಾಗಿ ಸಮರ್ಪಿಸಲಾಗಿದೆ ಎಂದು ಹೇಳಿದರು. ಐಟಿ, ಬಿಪಿಒ, ಉತ್ಪಾದನೆ, ಬ್ಯಾಂಕಿಂಗ್, ಆಟೋಮೊಬೈಲ್, ಆರೋಗ್ಯ, ಶಿಕ್ಷಣ, ಮಾರಾಟ, ಮಾರ್ಕೆಟಿಂಗ್, ಆತಿಥ್ಯ ಹಾಗೂ ಲಾಜಿಸ್ಟಿಕ್ಸ್ ಸೇರಿದಂತೆ ವಿವಿಧ ಕ್ಷೇತ್ರಗಳ ಕಂಪನಿಗಳು ಅಭ್ಯರ್ಥಿಗಳ ನೇಮಕಾತಿ ನಡೆಸಲಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ಪದವೀಧರರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಉದ್ಯೋಗ ಸೃಷ್ಟಿ, ಉದ್ಯಮಶೀಲತೆ ಹಾಗೂ ಸಮಾಜಮುಖಿ ಸೇವೆಯಲ್ಲಿ ಗಣನೀಯ ಸಾಧನೆಗೈದು ಸಮಾಜಕ್ಕೆ ಮಾದರಿಯಾಗಿರುವ ಕರಾವಳಿ ಮೂಲದ ಐವರು ಗಣ್ಯರನ್ನು ಈ ಸಂದರ್ಭದಲ್ಲಿ ಗೌರವ ಸನ್ಮಾನ ಮಾಡಲಾಗುವುದು. ಬೆಳ್ತಂಗಡಿಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ನ ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ, ಎಂಆರ್‌ಜಿ ಗ್ರೂಪ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ, ಭವಾನಿ ಗ್ರೂಪ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಕುಸುಮೋದರ ಡಿ. ಶೆಟ್ಟಿ, ಪ್ರೊವಿಟ್ ಫುಡ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ವಿನ್ಸೆಂಟ್ ಕುಟಿನ್ಹಾ ಹಾಗೂ ಎಕ್ಸ್ಪರ್ಟೀಸ್ ಕ ಕಂಪನಿಯ ಸಹ-ಸಂಸ್ಥಾಪಕ ಮಹಮ್ಮದ್ ಅಶ್ಪಾಕ್ ಅವರನ್ನು ಸನ್ಮಾನಿಸಲಾಗುವುದು ಎಂದರು.
ಆಗಸ್ಟ್ 6ರಿಂದ ಉಚಿತ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಆಯೋಜಿಸಲಾಗಿದ್ದು, ಎಂಟನೇ ತರಗತಿ ಹಾಗೂ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಅಭ್ಯರ್ಥಿಗಳು https://alvaspragati.com/candidate-registration ಮೂಲಕ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ www.alvaspragati.com ವೆಬ್‌ಸೈಟ್ ಅಥವಾ 9611750531, 9741440490, 9008907716, 7975223865 ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು.