ಮೂಡುಬಿದಿರೆ: ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೂಡುಬಿದಿರೆ ತಾಲೂಕಿನ ಕಡಂದಲೆ ಗ್ರಾಮದ ವಿದ್ಯಾಗಿರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎರಡು ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಿಕೊಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರಿಗೆ ಮನವಿ ಸಲ್ಲಿಸಲಾಗಿದೆ.
ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜಗದೀಶ್ ಕೋಟ್ಯಾನ್, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ್ ಪೂಜಾರಿ ಮಿಥುನ್ ರೈ ಅವರನ್ನು ಭೇಟಿ ಮಾಡಿ ಶಾಲೆಯ ಪ್ರಸ್ತುತ ಪರಿಸ್ಥಿತಿಯನ್ನು ವಿವರಿಸಿದರು. ಶಾಲೆಯಲ್ಲಿ ಇರುವ ಕೊಠಡಿಗಳು ವಿದ್ಯಾರ್ಥಿಗಳ ಸಂಖ್ಯೆಗೆ ಸಾಕಾಗುತ್ತಿಲ್ಲ. ಇದರಿಂದ ಬೋಧನೆ ಮತ್ತು ಕಲಿಕಾ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಅನಿವಾರ್ಯವಾಗಿದೆ ಎಂದು ಮನವಿಯಲ್ಲಿ ತಿಳಿಸಿದರು.
ಶಾಲೆಯ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಂಡು, ಎರಡು ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಮನವಿ ಮಾಡಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮಿಥುನ್ ರೈ, ಶಾಲೆಯ ಅಗತ್ಯತೆ ಕುರಿತು ಪರಿಶೀಲನೆ ನಡೆಸಿ ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ಸಾಧ್ಯವಾದ ನೆರವು ನೀಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.