ಮೂಡುಬಿದಿರೆ: ಮಿಜಾರ್ ಬಳಿ ಬಾಡಿಗೆ ಮನೆಯಲ್ಲಿ ಮಂಗಳವಾರ ಬೆಳಗ್ಗೆ ಸಿಲಿಂಡರ್ ಸೋರಿಕೆ ಪರಿಣಾಮ ಮನೆಯಲ್ಲಿದ್ದ ಮೂವರಿಗೆ ಸುಟ್ಟ ಗಾಯಗಳಾಗಿದ್ದು, ಓರ್ವನಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.
ಆಗಸ್ಟ್ 11ರಂದು ಬೆಳಗ್ಗೆ ಸುಮಾರು 6.30ರ ವೇಳೆಗೆ ಘಟನೆ ನಡೆದಿದೆ. ಮಿಜಾರ್ ಬಳಿಯ ಬಾಡಿಗೆ ಮನೆಯಲ್ಲಿ ಆಳ್ವಾಸ್ ಕಾಲೇಜಿನಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿರುವ ಶಿವರಾಮ (31), ಅವರ ಪತ್ನಿ ಗಂಗಾ (25) ಹಾಗೂ ಪುತ್ರ ಆದರ್ಶ್ (6) ಇದ್ದಾಗ ಸಿಲಿಂಡರ್ ಸ್ಫೋಟಗೊಂಡಿದೆ.
ಘಟನೆಯಲ್ಲಿ ಶಿವರಾಮ ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ಗಂಗಾ ಹಾಗೂ ಆದರ್ಶ್ ಅವರಿಗೂ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೆಚ್ಚಿನ ವಿವರಗಳು ತನಿಖೆಯಿಂದ ತಿಳಿದುಬರಬೇಕಿದೆ.