ಮೂಡುಬಿದಿರೆ: ಕಡಂದಲೆ ಗ್ರಾಮದ ವಿದ್ಯಾಗಿರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಆಚರಿಸಲಾಯಿತು.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳು ದೇಶಭಕ್ತಿ ಘೋಷಣೆಗಳೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡರು. ಮೆರವಣಿಗೆ ಶಾಲಾ ಆವರಣದಲ್ಲಿ ಸಾಗಿತು. ವಿದ್ಯಾರ್ಥಿಗಳ ಉತ್ಸಾಹ ಗಮನ ಸೆಳೆಯಿತು.

ಎಸ್‌ಡಿಎಂಸಿ ಅಧ್ಯಕ್ಷ ಸೀತಾರಾಮ ಸಾಲ್ಯಾನ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರಗೀತೆ ಹಾಡಲಾಯಿತು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆಗಳಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ ಮಾಡಿದ್ದು ವಿಶೇಷವಾಗಿತ್ತು.

ಶಾಲೆಯ ದಾನಿ ಹಾಗೂ ಹೆಲ್ಪಿಂಗ್ ಫ್ರೆಂಡ್ಸ್ ಇಸ್ರೇಲ್ ಸಂಸ್ಥೆಯ ಸಂಸ್ಥಾಪಕ ಸುನಿಲ್ ಮೆಂಡೋನ್ಸ ಮಾತನಾಡಿ, ಇಂದಿನ ಮಕ್ಕಳು ಮುಂದಿನ ಶಕ್ತಿಶಾಲಿ ಭಾರತದ ಪ್ರಜೆಗಳಾಗಿದ್ದು, ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳು ಯಾವುದೇ ಭೇದಭಾವವಿಲ್ಲದೆ ಶಿಕ್ಷಣದಲ್ಲಿ ಮುಂದೆ ಬರಬೇಕು ಎಂದರು. ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆಗಳಲ್ಲಿ ವಿದ್ಯಾರ್ಥಿಗಳು ಉತ್ತಮವಾಗಿ ಭಾಷಣ ಮಾಡಿರುವುದು ಕನ್ನಡ ಮಾಧ್ಯಮದ ಮಕ್ಕಳು ಯಾವುದರಲ್ಲೂ ಕಡಿಮೆಯಿಲ್ಲ ಎಂಬುದನ್ನು ತೋರಿಸಿದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಸುಚರಿತ ಶೆಟ್ಟಿ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ, ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ದೇಶದ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಹೇಳಿದರು.

ಮುಖ್ಯ ಶಿಕ್ಷಕಿ ಪ್ರತಿಭಾ ಎನ್., ಎಸ್‌ಡಿಎಂಸಿ ಅಧ್ಯಕ್ಷ ಸೀತಾರಾಮ ಸಾಲ್ಯಾನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ ಪೂಜಾರಿ, ವಿಲ್ಪ್ರೆಡ್ ದಾಂತಿಸ್, ಜೆಸಿಐನ ಸುರೇಂದ್ರ ಭಟ್, ಲಯನ್ಸ್ ಕ್ಲಬ್ ಅಲಂಗಾರು ಮಾಜಿ ಅಧ್ಯಕ್ಷ ಎಲ್.ಎನ್. ಅಮಿತ್ ಡಿಸಿಲ್ವ ಪಾಲಡ್ಕ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಜಗದೀಶ್ ಕೋಟ್ಯಾನ್ ಸೇರಿದಂತೆ ಶಿಕ್ಷಕರು, ಪೋಷಕರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಉತ್ಸಾಹ ಮತ್ತು ಪೋಷಕರು, ಹಳೆ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣವಾಗಿ ನಡೆಯಿತು.

ವರದಿ : ಜಗದೀಶ್ ಪೂಜಾರಿ ಕಡಂದಲೆ