ಮೂಡುಬಿದಿರೆ: ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಪ್ರಮೋದ್ ಎಂ.ಜಿ. ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕರ್ನಾಟಕ ಸರ್ಕಾರದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಆಯೋಜಿಸಿದ್ದ ‘ಅಂಬೇಡ್ಕರ್ ಓದು’ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಸಂವಿಧಾನವು ನಮ್ಮ ಜನಜೀವನದ ಜೀವಾಳವಾಗಿದ್ದು, ದೇಶದ ಪ್ರತಿಯೊಬ್ಬ ನಾಗರಿಕನ ಭಾವನೆ, ಹಕ್ಕು ಹಾಗೂ ಸ್ವಾತಂತ್ರ್ಯಗಳಿಗೆ ಸ್ಪಂದಿಸುವ ಮಹತ್ವದ ದಾಖಲೆ. ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ದೊರೆತ ಗಾಢ ಜೀವನಾನುಭವ ಹಾಗೂ ಆಧುನಿಕ ಶಿಕ್ಷಣದ ಫಲವಾಗಿ ಜೀವಪರವಾದ ಸಂವಿಧಾನ ರೂಪುಗೊಂಡಿದೆ ಎಂದು ಡಾ. ಪ್ರಮೋದ್ ಎಂ.ಜಿ. ಹೇಳಿದರು.

ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ಬದುಕು, ಚಿಂತನೆ ಹಾಗೂ ಸಾಮಾಜಿಕ ಪರಿವರ್ತನೆಯ ಆಶಯಗಳನ್ನು ಅರಿತುಕೊಳ್ಳುವುದರ ಜೊತೆಗೆ ಸಂವಿಧಾನದ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಓದು ಎಂದರೆ ಕೇವಲ ಪರೀಕ್ಷೆಗೆ ಸಿದ್ಧತೆ ನಡೆಸುವುದಲ್ಲ. ಪಠ್ಯದ ಆಚೆಗೂ ಓದು ವಿಸ್ತರಿಸಬೇಕು. ಸಂವಿಧಾನದ ವಿಧಿಗಳು, ನಾಗರಿಕರ ಹಕ್ಕುಗಳು ಹಾಗೂ ಕರ್ತವ್ಯಗಳ ಕುರಿತು ಅರಿವು ಹೊಂದುವುದರ ಜೊತೆಗೆ ಅವುಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.

ಸಂವಿಧಾನವು ನೀಡಿರುವ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ಅರ್ಥಮಾಡಿಕೊಂಡು ಮುನ್ನಡೆಯಬೇಕು ಎಂದು ಡಾ. ಪ್ರಮೋದ್ ಎಂ.ಜಿ. ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಮನುಷ್ಯನನ್ನು ಮನುಷ್ಯನಂತೆ ಕಾಣುವ ಮತ್ತು ಗೌರವದಿಂದ ವ್ಯವಹರಿಸುವ ಗುಣ ಪ್ರತಿಯೊಬ್ಬರಲ್ಲೂ ಬೆಳೆಬೇಕು. ಸಂವಿಧಾನದ ಆಶಯಗಳನ್ನು ಅರಿತುಕೊಂಡವರಿಗೆ ಮೇಲು-ಕೀಳು ಎಂಬ ಭೇದಭಾವದ ಮನೋಭಾವ ದೂರವಾಗುತ್ತದೆ. ಅಂಬೇಡ್ಕರ್ ಅವರ ಚಿಂತನೆಗಳು ಸಮಾಜದಲ್ಲಿ ಸಮಾನತೆ ಹಾಗೂ ಮಾನವೀಯತೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದರು.

ಕಾರ್ಯಕ್ರಮದ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಸ್ಮರಣಾರ್ಥ ಆಯೋಜಿಸಿದ್ದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಸಂವಿಧಾನ, ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಅಂಬೇಡ್ಕರ್ ಅವರ ವಿಚಾರಧಾರೆಗಳ ಕುರಿತು ಆಸಕ್ತಿ ಮೂಡಿಸುವ ಉದ್ದೇಶದಿಂದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿನಿ ನಿರೀಕ್ಷಾ ಎನ್. ಪೂಜಾರಿ ಪ್ರಥಮ, ತೃತೀಯ ಬಿ.ಎ. ವಿದ್ಯಾರ್ಥಿ ವೀರಭದ್ರ ದ್ವಿತೀಯ ಹಾಗೂ ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಸಿಂಚನ ತೃತೀಯ ಸ್ಥಾನ ಪಡೆದರು.

ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಬಿ.ಎ. ವಿದ್ಯಾರ್ಥಿನಿ ಅಪ್ಸನಾ ಬೇಗಂ ನದಾಫ್ ಪ್ರಥಮ, ದ್ವಿತೀಯ ಬಿ.ಎ. ವಿದ್ಯಾರ್ಥಿನಿ ಕವಿತಾ ಎಚ್. ದ್ವಿತೀಯ ಹಾಗೂ ದ್ವಿತೀಯ ಬಿ.ಎ. ವಿದ್ಯಾರ್ಥಿನಿ ತೇಜಸ್ವಿನಿ ಶಿವಪ್ರಸಾದ್ ತೃತೀಯ ಸ್ಥಾನ ಗಳಿಸಿದರು. ಕಾರ್ಯಕ್ರಮದ ಸಂಯೋಜಕ ಡಾ. ಯೋಗೀಶ್ ಕೈರೋಡಿ ಪ್ರಸ್ತಾವನೆಗೈದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ದಿನೇಶ್ ಉಪ್ಪಾರ ಸ್ಪರ್ಧೆಗಳ ವಿಜೇತರ ವಿವರಗಳನ್ನು ವಾಚಿಸಿದರು. ವಿದ್ಯಾರ್ಥಿನಿ ಕುರ್ರತ್ ಉಲೈನ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಲಿಖಿತ್ ಆಶಯಗೀತೆ ಹಾಡಿದರು.