ಮೂಡುಬಿದಿರೆ: ಯುವವಾಹಿನಿ ಮೂಡುಬಿದಿರೆ ಘಟಕ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರದ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಒಂದು ವಾರದ ಉಚಿತ ಬೇಸಿಗೆ ಶಿಬಿರವು ಸಮಾಜ ಮಂದಿರದ ಸ್ವರ್ಣ ಮಂದಿರದಲ್ಲಿ ಆರಂಭವಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್, ಯುವವಾಹಿನಿ ಸಂಸ್ಥೆಯ ಕಾರ್ಯವೈಖರಿ ಎಲ್ಲಾ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ನುಡಿದರು. ಇಂತಹ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ ಹಾಗೂ ಭವಿಷ್ಯದ ಬೆಳವಣಿಗೆಗೆ ಪೂರಕವಾಗಿವೆ ಎಂದು ತಿಳಿಸಿದ ಅವರು, ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ. ಕೆ. ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಂಸ್ಥೆಯ ಸಮಾಜಮುಖಿ ಚಟುವಟಿಕೆಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕಿ ಹಾಗೂ ವೀಚೀಸ್ ತರಬೇತಿ ಕೇಂದ್ರದ ನಿರ್ದೇಶಕಿ ಶುಭಲಕ್ಷ್ಮಿ ಶಿಬಿರದಲ್ಲಿ ನಡೆಯಲಿರುವ ವಿವಿಧ ಕೌಶಲ್ಯ ತರಬೇತಿಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾತನಾಡಿ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿ ಇಂತಹ ಉಚಿತ ಶಿಬಿರ ಆಯೋಜಿಸಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ ಎಂದರು. ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ಅಶ್ವಿನ್ ಪೂಜಾರಿ ಹಾಗೂ ಕೋಶಾಧಿಕಾರಿ ಜಯಶೀಲಾ ಎಸ್. ಪೂಜಾರಿ ಉಪಸ್ಥಿತರಿದ್ದರು. ಶುಭಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ವರದಿ : ಕವಿತಾ ಓಲಿ