ಮೂಡುಬಿದಿರೆ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಸಪ್ತ ಸ್ವರದಲ್ಲಿ ವಿಶ್ವ ಭೂಮಿ ದಿನಾಚರಣೆ ಅಂಗವಾಗಿ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು.
ಕಾರ್ಕಳದ ಪ್ರಧಾನ ಸಿವಿಲ್, ಜೆಎಂಎಫ್‌ಸಿ ನ್ಯಾಯಾಧೀಶರಾದ ಕೋಮಲ ಆರ್. ಸಿ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಪರಿಸರ ಮಾಲಿನ್ಯಗೊಳ್ಳುತ್ತಿದ್ದು, ಶುದ್ಧ ಗಾಳಿ ಮತ್ತು ನೀರು ಸಿಗದೆ ಸಮಾಜ ಶೋಚನೀಯ ಸ್ಥಿತಿಯಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಪರಿಸರ ಸಂರಕ್ಷಣೆಯಲ್ಲಿ ನಾವೆಲ್ಲರೂ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿದ್ದ ಕಾರ್ಕಳದ ನ್ಯಾಯವಾದಿ ಸಂಘದ ಪ್ರಧಾನ ಕಾರ್ಯದರ್ಶಿ ಪದ್ಮಪ್ರಸಾದ್ ಜೈನ್ ಮಾತನಾಡಿ, ಸಾರ್ವಜನಿಕರು ಕಾನೂನಿನ ಚೌಕಟ್ಟಿನಲ್ಲಿ ಜೀವನ ನಡೆಸಬೇಕು ಮತ್ತು ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ಜನ ಸಮುದಾಯ ಕಾರ್ಯಪ್ರವೃತ್ತರಾಗಬೇಕು ಎಂದು ನುಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕಾರ್ಕಳದ ನ್ಯಾಯವಾದಿ ಸುದೇಶ್ ಶೆಟ್ಟಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಭೂಮಿಯ ತಾಪಮಾನ ಏರಿಕೆಗೆ ಪರಿಸರ ನಾಶವೇ ಮೂಲ ಕಾರಣ. ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ಪರಿಶುದ್ಧ ನೀರು ಮತ್ತು ನೀಲಿ ಆಕಾಶವನ್ನು ಬಿಟ್ಟು ಹೋಗುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು. ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಅನೇಕ ಕಾಯ್ದೆ ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಸುಂದರ ಪರಿಸರ ನಿರ್ಮಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಡಾ. ಗಣನಾಥ ಶೆಟ್ಟಿ, ಪರಿಸರ ಕಾಳಜಿಯ ಅರಿವಿದ್ದರೂ ಅದನ್ನು ಅನುಷ್ಠಾನಗೊಳಿಸುವಲ್ಲಿ ನಾವು ಎಡವಿದ್ದೇವೆ. ಈಗಾಗಲೇ ಕ್ರಿಯೇಟಿವ್ ಸಂಸ್ಥೆಯು ಎನ್ ಎಸ್ ಎಸ್ ಹಾಗೂ ಇತರ ಯೋಜನೆಗಳ ಮೂಲಕ ಗಿಡ ನೆಡುವಂತಹ ಅನೇಕ ಪರಿಸರ ಪೂರಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂದರು.
ವೇದಿಕೆಯಲ್ಲಿ ಕಾನೂನು ಸೇವೆಗಳ ಸಮಿತಿಯ ಸದಸ್ಯರಾದ ಜ್ಯೋತಿ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕನ್ನಡ ಭಾಷಾ ಉಪನ್ಯಾಸಕ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು.