ಮೂಡುಬಿದಿರೆ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೂಡುಬಿದಿರೆ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಮಹೇಶ್ವರಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅರ್ಚನಾ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳೆಯೊಬ್ಬರು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವುದು ಈ ಬಾರಿಯ ವಿಶೇಷ. ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಹೇಶ್ವರಿ ಕಳೆದ 20 ವರ್ಷಗಳಿಂದ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಮೂಡುಬಿದಿರೆ ಮೈನ್ ಸರ್ಕಾರಿ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು, 2015-2020ರ ಅವಧಿಯಲ್ಲಿ ಬೆಳ್ತಂಗಡಿ ತಾಲೂಕು ಘಟಕದ ಸಂಘಟನೆಯಲ್ಲಿ ಜಿಲ್ಲಾ ಪ್ರತಿನಿಧಿಯಾಗಿ ಜವಾಬ್ದಾರಿ ನಿಭಾಯಿಸಿದ್ದರು. ಪ್ರಸ್ತುತ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಮೂಡುಬಿದಿರೆ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಅರ್ಚನಾ ಜೈನ್ ಮಾಂಟ್ರಾಡಿ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕಿಯಾಗಿದ್ದಾರೆ. ಕಳೆದ 20 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು, ಕರ್ನಾಟಕ ರಾಜ್ಯ ಎನ್.ಪಿ.ಎಸ್. ನೌಕರರ ಸಂಘದ ಮೂಡುಬಿದಿರೆ ತಾಲೂಕು ಘಟಕದ ಪದಾಧಿಕಾರಿಯಾಗಿದ್ದಾರೆ. ಕಳೆದ ಅವಧಿಯಲ್ಲಿ ಇವರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಕೋಶಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಚುನಾವಣಾ ಅಧಿಕಾರಿ ಪ್ರಫುಲ್ಲ ಶೆಟ್ಟಿ ಇಡೀ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.