ಮೂಡುಬಿದಿರೆ: ಶಿಕ್ಷಣವು ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೆ ಮತ್ತು ಸಮಾಜದ ಪ್ರಗತಿಗೆ ಭದ್ರ ಅಡಿಪಾಯ ಎಂಬ ಧ್ಯೇಯದೊಂದಿಗೆ, ತೋಡಾರು ನವಚೇತನ ಸೇವಾ ಬಳಗ ವತಿಯಿಂದ ನವಚೇತನ ವಿದ್ಯಾನಿಧಿ ಯೋಜನೆಯಡಿ ಗ್ರಾಮೀಣ ಭಾಗದ ಐದು ಶಾಲೆಗಳ 200ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬರವಣಿಗೆ ಪುಸ್ತಕಗಳನ್ನು ವಿತರಿಸಲಾಯಿತು. ಸಮಾಜಸೇವಕ ಸುಕೇಶ್ ಜಿ. ಅಂಚನ್ ನೇತೃತ್ವದಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ಶೈಕ್ಷಣಿಕ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ಮಹಾವೀರ ಹಿರಿಯ ಪ್ರಾಥಮಿಕ ಶಾಲೆ ಅಮನಬೆಟ್ಟು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೋರುಗುಡ್ಡೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟೆಬಾಗಿಲು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಪ್ಪದಕುಮೇರ್ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಣಪಿಲ ಶಾಲೆಗಳ ವಿದ್ಯಾರ್ಥಿಗಳಿಗೆ ಈ ಪುಸ್ತಕಗಳನ್ನು ನೀಡಲಾಯಿತು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯ ಒದಗಿಸುವುದು ಮತ್ತು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕಲಿಕಾ ಚಟುವಟಿಕೆಗಳಿಗೆ ನೆರವಾಗುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಕಾರ್ಯಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಲೆಯ ಶಿಕ್ಷಕರು, ಸಿಬ್ಬಂದಿ, ಪೋಷಕರು ಮತ್ತು ವಿದ್ಯಾರ್ಥಿಗಳು ಸಂಸ್ಥೆಯ ಸಾಮಾಜಿಕ ಕಳಕಳಿಯನ್ನು ಶ್ಲಾಘಿಸಿದರು. ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಇಂತಹ ಬೆಂಬಲವು ವಿದ್ಯಾರ್ಥಿಗಳಲ್ಲಿ ಕಲಿಕೆಯ ಉತ್ಸಾಹವನ್ನು ಹೆಚ್ಚಿಸಲು ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮಕ್ಕೆ ಸಹಕರಿಸಿದ ದಾನಿಗಳು, ಸದಸ್ಯರು, ಹಿತೈಷಿಗಳು ಹಾಗೂ ಶಾಲಾ ಆಡಳಿತ ಮಂಡಳಿಗೆ ಸಂಸ್ಥೆಯ ವತಿಯಿಂದ ವಂದಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ದಾಮೋದರ ಮಿಜಾರು, ಗೌರವಾಧ್ಯಕ್ಷ ದಯಾನಂದ ಶೆಟ್ಟಿ, ಉಪಾಧ್ಯಕ್ಷರಾದ ಕಿರಣ್ ಕುಲಾಲ್, ಸುನೀಲ್ ಅಂಚನ್ ಮಾರ್ನಾಡ್, ಸದಸ್ಯರಾದ ದಿನಕರ ಮಾರ್ನಾಡ್, ಮಂಜುನಾಥ ಬೈಪಾಸ್, ದಿನಕರ ಪೂಜಾರಿ ಮಿಜಾರ್, ವಿಜಯ ದರಗುಡ್ಡೆ, ಅಶ್ವಥ್ ಪಣಪಿಲ, ಮುನಿರಾಜ್, ಪೂರ್ಣಿಮಾ ಕೋಟ್ಯಾನ್ ಮಾರ್ನಾಡ್ ಮತ್ತು ದೇವಿಕಾ ಪ್ರಸಾದ್ ವೇಣೂರು ಉಪಸ್ಥಿತರಿದ್ದರು.