ಮೂಡುಬಿದಿರೆ: ಸ್ವಸ್ತಿ ಶ್ರೀ ಜೈನ ವಸತಿ ಪದವಿಪೂರ್ವ ಕಾಲೇಜಿನ 2026-27ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ವರ್ಷದ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ಮೂಡುಬಿದಿರೆ ಶ್ರೀ ಜೈನ ಮಠದ ಭಟ್ಟಾರಕ ಸಭಾಭವನದಲ್ಲಿ ನೆರವೇರಿತು.
ಕಾಲೇಜಿನ ಸ್ಥಾಪಕ ಅಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಧವಳತ್ರಯ ಜೈನ ಕಾಶಿ ಟ್ರಸ್ಟ್ ಹಾಗೂ ಜೈನ ಮಠ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಲೇಖನ ಸಾಮಗ್ರಿಗಳನ್ನು ವಿತರಿಸಿ ಆಶೀರ್ವಚನ ನೀಡಿದರು. ವಿದ್ಯಾರ್ಥಿಗಳಲ್ಲಿ ಉತ್ತಮ ವರ್ತನೆ, ಶಿಸ್ತು ಮತ್ತು ಸಂಯಮವಿದ್ದಾಗ ಮಾತ್ರ ವಿದ್ಯೆಯ ಕಡೆಗೆ ಗಮನ ಹರಿಸಲು ಸಾಧ್ಯ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ವಿದ್ಯಾರ್ಜನೆ ಮಾಡಿದರೆ ಹೆತ್ತವರಿಗೂ ಮತ್ತು ಕಲಿತ ಕಾಲೇಜಿಗೂ ಹೆಸರು ತರಬಹುದು ಎಂದು ನುಡಿದರು. 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ದಾಖಲಿಸಲು ಕಾರಣರಾದ ವಿದ್ಯಾರ್ಥಿಗಳನ್ನು ಹಾಗೂ ಉಪನ್ಯಾಸಕರನ್ನು ಸ್ವಾಮೀಜಿ ಅಭಿನಂದಿಸಿದರು.
ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಸುಶ್ಮಿತಾ ಹಾಗೂ ಶ್ರುತಿ ಅವರನ್ನು ವಕೀಲ ಬಾಹುಬಲಿ ಪ್ರಸಾದ್ ನಗದು ಬಹುಮಾನ ನೀಡಿ ಅಭಿನಂದಿಸಿದರು. ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶ್ವೇತಾ ಜೈನ್, ಉದ್ಯಮಿ ಪ್ರದೀಪ್ ಚಂದ್ರ ಜೈನ್ ಉಪಸ್ಥಿತರಿದ್ದರು. ಸಂದರ್ಭದಲ್ಲಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಧವಳತ್ರಯ ಜೈನ ಕಾಶಿ ಟ್ರಸ್ಟ್ ವತಿಯಿಂದ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಉಪನ್ಯಾಸಕಿ ಸರಸ್ವತಿ ಕಾರ್ಯಕ್ರಮ ನಿರೂಪಿಸಿದರು. ಪ್ರಾಂಶುಪಾಲೆ ಸೌಮ್ಯಶ್ರೀ ಸ್ವಾಗತಿಸಿದರು. ಉಪನ್ಯಾಸಕಿ ಸುಷ್ಮಾ ವಂದಿಸಿದರು.