ಮೂಡುಬಿದಿರೆ: ಮಕ್ಕಳ ಶಿಕ್ಷಣದಲ್ಲಿ ಪೋಷಕರ ಸಹಭಾಗಿತ್ವವು ಯಶಸ್ಸಿನ ಭದ್ರ ಅಡಿಪಾಯವಾಗಿದ್ದು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಸಿಲ್ವಿಸ್ಟರ್ ವಿನ್ಸೆಂಟ್ ಲೋಬೊ ಹೇಳಿದರು. ಶಿರ್ತಾಡಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪೋಷಕ-ಶಿಕ್ಷಕರ ಸಭೆ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಶಿಕ್ಷಣ, ಶಿಸ್ತು ಹಾಗೂ ವ್ಯಕ್ತಿತ್ವ ವಿಕಾಸದಲ್ಲಿ ಶಾಲೆ ಮತ್ತು ಪೋಷಕರ ಸಮನ್ವಯ ಅಗತ್ಯವಾಗಿದೆ ಎಂದು ತಿಳಿಸಿದರು. ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ಶಾಲಾ ಪೋಷಕರಿಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಆಯೋಜಿಸಲಾಯಿತು. ವೈದ್ಯೆ ಕೃಪಾ ಡೇಸ ಮಾತನಾಡಿ, ಇಂದಿನ ಆಹಾರ ಪದ್ಧತಿ ಮತ್ತು ಜೀವನಶೈಲಿಯು ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಆದ್ದರಿಂದ ಆರೋಗ್ಯಕರ ಆಹಾರ ಹಾಗೂ ನಿಯಮಿತ ಆರೋಗ್ಯ ತಪಾಸಣೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಬಿಂದು ಮ್ಯಾಕ್ಸಿಂ ಡಿಸೋಜ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ನಡವಳಿಕೆ ಹಾಗೂ ವ್ಯಕ್ತಿತ್ವ ವಿಕಾಸದಲ್ಲಿ ಪೋಷಕರ ನಿರಂತರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು. ಮಕ್ಕಳ ಕಲಿಕಾ ಪ್ರಕ್ರಿಯೆಯಲ್ಲಿ ಪೋಷಕರು ಸಕ್ರಿಯವಾಗಿ ಭಾಗವಹಿಸುವುದರಿಂದ ಉತ್ತಮ ಫಲಿತಾಂಶಗಳನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ಭಾಗವಹಿಸಿದ್ದರು. ಪ್ರಿನ್ಸಿಯಾ ಮಿರಾಂದ ನಿರೂಪಿಸಿದರು. ಶಾಲಿನಿ ಸ್ವಾಗತಿಸಿದರು. ಮಧುರ ಜೈನ್ ವಂದಿಸಿದರು.