ಮೂಡುಬಿದಿರೆ: ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅವಿಭಜಿತ ಕಂಬಳ ಸಮಿತಿಯಲ್ಲಿ ಮಹತ್ವದ ಬದಲಾವಣೆಗಳು ನಡೆಯುವ ಸಾಧ್ಯತೆ ಕಂಡುಬಂದಿದೆ. ಕಂಬಳ ಕ್ರೀಡೆಗೆ ಶಿಸ್ತು ಮತ್ತು ಸಂಘಟಿತ ಚೌಕಟ್ಟು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಈ ಸಮಿತಿಯು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳನ್ನು ಒಳಗೊಂಡಿತ್ತು.
ಇದೀಗ ಕಂಬಳ ನಡೆಯುವ ಪ್ರತಿ ಜಿಲ್ಲೆಯಲ್ಲೂ ಪ್ರತ್ಯೇಕ ಜಿಲ್ಲಾ ಕಂಬಳ ಸಮಿತಿ ರಚಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ. ಅದರಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಜಿಲ್ಲಾ ಸಮಿತಿಗಳನ್ನು ರಚಿಸುವ ಸಾಧ್ಯತೆ ಇದೆ. ಅಲ್ಲದೆ ಬೆಂಗಳೂರು, ಶಿವಮೊಗ್ಗ, ಮೈಸೂರು ಸೇರಿದಂತೆ ಮುಂದಿನ ದಿನಗಳಲ್ಲಿ ಕಂಬಳ ಆಯೋಜನೆಯಾಗುವ ಇತರ ಜಿಲ್ಲೆಗಳಲ್ಲೂ ಜಿಲ್ಲಾ ಕಂಬಳ ಸಮಿತಿಗಳನ್ನು ಸ್ಥಾಪಿಸುವ ಪ್ರಸ್ತಾಪ ಮುಂದಿದೆ.
ಪ್ರಸ್ತುತ ಜಿಲ್ಲಾ ಕಂಬಳ ಸಮಿತಿಗೆ ಜೂನ್ 21ರಂದು ನಡೆಯಲಿರುವ ಮಹಾಸಭೆಯಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇದರಿಂದ ಆಜೀವ ಸದಸ್ಯರ ಪಾತ್ರ ಮತ್ತು ಪ್ರಾತಿನಿಧ್ಯ ಮತ್ತಷ್ಟು ಬಲವಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಆಜೀವ ಸದಸ್ಯರ ಹಕ್ಕುಗಳ ಪರ ಹೋರಾಟ ಜಿಲ್ಲಾ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಂಬಳ ಅಸೋಸಿಯೇಷನ್‌ನ ಕೋಶಾಧಿಕಾರಿ ಮುಚ್ಚೂರು ಲೋಕೇಶ್ ಶೆಟ್ಟಿ ಅವರು ಆಜೀವ ಸದಸ್ಯರ ಹಕ್ಕುಗಳ ಕುರಿತು ನಿರಂತರವಾಗಿ ಧ್ವನಿ ಎತ್ತುತ್ತ ಬಂದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಮುಚ್ಚೂರು ಲೋಕೇಶ್ ಶೆಟ್ಟಿ, ಜಿಲ್ಲಾ ಕಂಬಳ ಸಮಿತಿಯಲ್ಲಿ ಬದಲಾವಣೆ ಆಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಇದರಿಂದ ಆಜೀವ ಸದಸ್ಯರಿಗೆ ಹೆಚ್ಚಿನ ಬಲ ಸಿಗಲಿದೆ ಎಂದು ತಿಳಿಸಿದ್ದಾರೆ.