ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ 1,500ಕ್ಕೂ ಅಧಿಕ ವಿದ್ಯಾರ್ಥಿಗಳು ಭಾನುವಾರ ಸಾಮೂಹಿಕ ಯೋಗಾಭ್ಯಾಸ ನಡೆಸುವ ಮೂಲಕ 12ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಿದರು.
ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ವತಿಯಿಂದ ಮೂಡುಬಿದಿರೆಯ ವಿದ್ಯಾಗಿರಿಯ ಆಳ್ವಾಸ್ ನುಡಿಸಿರಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಆಳ್ವಾಸ್ ಫಾರ್ಮಸಿ ವ್ಯವಸ್ಥಾಪಕ ನಿರ್ದೇಶಕಿ ಗ್ರೀಷ್ಮಾ ವಿವೇಕ್ ಆಳ್ವ ಉದ್ಘಾಟಿಸಿದರು. ಸಂಗೀತ ನಿರ್ದೇಶಕ ವಿ. ಮನೋಹರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.
ಆಳ್ವಾಸ್ ಶಾಲೆ, ನರ್ಸಿಂಗ್ ಕಾಲೇಜು, ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು, ಆಯುರ್ವೇದ ವೈದ್ಯಕೀಯ ಕಾಲೇಜು, ಹೋಮಿಯೋಪತಿ ವೈದ್ಯಕೀಯ ಕಾಲೇಜು, ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ, ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಹಾಗೂ ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸಾಮಾನ್ಯ ಯೋಗ ಪ್ರೋಟೋಕಾಲ್‌ಗೆ ಅನುಗುಣವಾಗಿ ವಿವಿಧ ವ್ಯಾಯಾಮಗಳು, ಆಸನಗಳು, ಪ್ರಾಣಾಯಾಮ ಮತ್ತು ಧ್ಯಾನಾಭ್ಯಾಸಗಳನ್ನು ನಡೆಸಲಾಯಿತು.
ಯೋಗಾಭ್ಯಾಸವು ದೈಹಿಕ ಆರೋಗ್ಯ, ಮಾನಸಿಕ ನೆಮ್ಮದಿ ಹಾಗೂ ಭಾವನಾತ್ಮಕ ಸಮತೋಲನ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ಸಾರಲಾಯಿತು.
ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿ ಅನಂತ ಕೃಷ್ಣ ಯೋಗಾಭ್ಯಾಸಕ್ಕೆ ಮಾರ್ಗದರ್ಶನ ನೀಡಿದರು.