ಮೂಡುಬಿದಿರೆ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 21ರಂದು ವೇಣೂರು ಸಮೀಪದ ಕರಿಮಣೇಲಿನ ಬ್ರೈಟ್ ಹೊರೈಝನ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು.
ಶಾಲೆಯ ದೈಹಿಕ ಶಿಕ್ಷಣ ನಿರ್ದೇಶಕ ವೀಕ್ಷಿತ್ ವಿ. ಕುಮಾರ್ ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮಗಳ ಅಭ್ಯಾಸವನ್ನು ನಡೆಸಿಕೊಟ್ಟರು. ಯೋಗದ ಮಹತ್ವ, ಆರೋಗ್ಯಕರ ಜೀವನಶೈಲಿಯಲ್ಲಿ ಅದರ ಪಾತ್ರ ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಯೋಗ ಬೀರುವ ಸಕಾರಾತ್ಮಕ ಪರಿಣಾಮಗಳ ಕುರಿತು ಮಾಹಿತಿ ನೀಡಿದರು.
ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಭಾಗವಹಿಸಿ ವಿವಿಧ ಆಸನಗಳನ್ನು ಅಭ್ಯಾಸ ಮಾಡಿದರು. ಯೋಗದ ಮೂಲಕ ದೇಹದ ಸದೃಢತೆ, ಏಕಾಗ್ರತೆ ಮತ್ತು ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಬಹುದು ಎಂದು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ಶರತ್ ಗೋರೆ, ಕಾರ್ಯದರ್ಶಿ ಶಾಂಭವಿ ಬಿ. ಎನ್., ಶಾಲೆಯ ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.