ಮೂಡುಬಿದಿರೆ: ಯುವವಾಹಿನಿ ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಐದು ದಿನಗಳ ಉಚಿತ ಸೀರೆ ಕುಚ್ಚು ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಸೋಮವಾರ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಕ್ರೀಡಾ ನಿರ್ದೇಶಕ ಶಂಕರ್ ಕೋಟ್ಯಾನ್ ಮಾತನಾಡಿ, ಹೊಲಿಗೆ ಕೌಶಲ್ಯ ಹೊಂದಿರುವ ಮಹಿಳೆಯರು ಸೀರೆ ಕುಚ್ಚು ಕೌಶಲ್ಯವನ್ನು ಅಳವಡಿಸಿಕೊಂಡು ಸ್ವ ಉದ್ಯೋಗ ಆರಂಭಿಸಿದರೆ ಆರ್ಥಿಕವಾಗಿ ಮತ್ತಷ್ಟು ಸಬಲರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಇದರಿಂದ ಕುಟುಂಬದ ಖರ್ಚು-ವೆಚ್ಚ ನಿರ್ವಹಣೆಗೆ ಸಹಕಾರಿಯಾಗಲಿದೆ ಎಂದರು.
ಭಾರತೀಯ ವಿಕಾಸ ಟ್ರಸ್ಟ್‌ನ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ತರಬೇತಿಯ ನಿಯಮಗಳು ಹಾಗೂ ಉದ್ದೇಶಗಳ ಕುರಿತು ಮಾಹಿತಿ ನೀಡಿದರು. ಕೌಶಲ್ಯ ತರಬೇತಿ ಮಹಿಳೆಯರಿಗೆ ಸ್ವ ಉದ್ಯೋಗದ ಅವಕಾಶಗಳನ್ನು ಸೃಷ್ಟಿಸುವ ಶಕ್ತಿಯಾಗಿದೆ. ಇಂತಹ ಅವಕಾಶಗಳನ್ನು ಮಹಿಳೆಯರು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.
ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಸುಶಾಂತ್ ಕರ್ಕೇರ ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಶುಭ ಹಾರೈಸಿದರು.
ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್, ಸಂಪನ್ಮೂಲ ವ್ಯಕ್ತಿ ಶುಭಲಕ್ಷ್ಮೀ, ಘಟಕದ ಸಂಘಟನಾ ಕಾರ್ಯದರ್ಶಿ ಪ್ರಸಾದ್, ಅಮೂಲ್ಯ ಆರ್ಥಿಕ ಸಾಕ್ಷರತಾ ಸಮಾಲೋಚಕ ಲತೇಶ್ ಬಿ ಉಪಸ್ಥಿತರಿದ್ದರು.
ವೀಚೀಸ್ ಕೌಶಲ್ಯ ತರಬೇತಿ ಕೇಂದ್ರದ ವಿದ್ಯಾರ್ಥಿನಿ ಜೆನಿಫರ್ ಕಾರ್ಯಕ್ರಮ ನಿರೂಪಿಸಿದರು. ಸುಮಲತಾ ಸ್ವಾಗತಿಸಿದರು. ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರದ ನಿರ್ದೇಶಕಿ ಶುಭಲಕ್ಷ್ಮೀ ವಂದಿಸಿದರು. ಮೂಡುಬಿದಿರೆ ವ್ಯಾಪ್ತಿಯ 35 ಮಹಿಳೆಯರು ಐದು ದಿನಗಳ ತರಬೇತಿಯಲ್ಲಿ ಭಾಗವಹಿಸುತ್ತಿದ್ದಾರೆ