ಕಾರ್ಕಳ : ವಿದ್ಯಾರ್ಥಿಗಳು ಪಠ್ಯ ಕಲಿಕೆಗೆ ಮಾತ್ರ ಸೀಮಿತವಾಗದೆ ಮೌಲ್ಯಗಳು, ಶಿಸ್ತು ಹಾಗೂ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು ಎಂದು ರಾಷ್ಟ್ರೀಯ ಜೆಸಿಐ ತರಬೇತುದಾರ ಹಾಗೂ ಖ್ಯಾತ ವಾಗ್ಮಿ ಕೆ. ರಾಜೇಂದ್ರ ಭಟ್ ಹೇಳಿದರು.
ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿನೂತನ ಪರಿಕಲ್ಪನೆಯಾದ 'ಕ್ರಿಯೇಟಿವ್ ಸ್ಫೂರ್ತಿ ಮಾತು-15' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ವಿಶೇಷ ಸಾಮರ್ಥ್ಯ ಅಡಗಿದ್ದು, ಅದನ್ನು ಗುರುತಿಸಿ ಬೆಳೆಸಿದಾಗ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದು ತಿಳಿಸಿದರು. ಓದು ಭಾವನಾತ್ಮಕ ಅನುಭವವಾದಾಗ ಅದರ ನಿಜವಾದ ಸಾರ್ಥಕತೆ ದೊರೆಯುತ್ತದೆ. ತಾಳ್ಮೆ ವಿದ್ಯಾರ್ಥಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ. ನಿರ್ಭೀತಿಯಿಂದ ಕಾರ್ಯನಿರ್ವಹಿಸಿದಾಗ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರೂ ಸರಳ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ವಿವಿಧ ಪ್ರಾತ್ಯಕ್ಷಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕ್ರಿಯೇಟಿವ್ ಕಾಲೇಜಿನ ಸಹ ಸಂಸ್ಥಾಪಕ ಡಾ. ಗಣನಾಥ ಶೆಟ್ಟಿ ಮಾತನಾಡಿ, ಸಂಸ್ಥೆಯಲ್ಲಿ ನಡೆಯುವ ಪಾಠ ಪ್ರವಚನಗಳು ಹಾಗೂ ಶೈಕ್ಷಣಿಕ ವರ್ಷದುದ್ದಕ್ಕೂ ಆಯೋಜಿಸಲಾಗುವ ವಿವಿಧ ಶೈಕ್ಷಣಿಕ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ಲಕ್ಷ್ಮಿಕಾಂತ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.