ಮೂಡುಬಿದಿರೆ: ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರಾಜ್ಯದ 1,000 ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ಮೂಲಕ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಯಿತು.

ಅದರ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಕರ್ನಾಟಕ ಜನಜಾಗೃತಿ ವೇದಿಕೆ, ಮೂಡುಬಿದಿರೆ ಇವರ ಸಹಯೋಗದಲ್ಲಿ ತಾಲೂಕಿನ ಶಿರ್ತಾಡಿ ವಲಯದ ವಾಲ್ಪಾಡಿ ಕಾರ್ಯಕ್ಷೇತ್ರದ ಅಳಿಯೂರು ಪದವಿಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.

ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಲಕ್ಷ್ಮಣ ಸುವರ್ಣ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರವೀಂದ್ರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಅವರು ವಿದ್ಯಾರ್ಥಿಗಳಿಗೆ ದುಶ್ಚಟಗಳ ದುಷ್ಪರಿಣಾಮ ಮತ್ತು ಅವುಗಳಿಂದ ದೂರವಿರುವ ಕುರಿತು ಆನ್‌ಲೈನ್ ಮೂಲಕ ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕಾರಿ ಹೆಚ್. ಎನ್. ವೆಂಕಟೇಶ್ ಪ್ರಸನ್ನ ಅವರು ಮಾದಕ ವ್ಯಸನ ಹಾಗೂ ಇತರೆ ದುಶ್ಚಟಗಳಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.

ಅಳಿಯೂರು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್, ಪದ್ಮಿನಿ, ವಿದ್ಯಾ, ಸಂದೀಪ್ ನಾಯಕ್, ಮಂಜುಳ, ರಂಜನಕುಮಾರಿ, ಮಣಿತ, ತೇಜಶ್ರೀ, ದಿಶಾ ಹಾಗೂ ಸರೋಜಿನಿ ಉಪಸ್ಥಿತರಿದ್ದರು.

ಮೇಲ್ವಿಚಾರಕಿ ಪುಷ್ಪ ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿ ಸುಶೀಲ ವಂದಿಸಿದರು.