ಮೂಡುಬಿದಿರೆ: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜುಲೈ 3ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಮೂಡುಬಿದಿರೆ: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜುಲೈ 3ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯ ವಸತಿ ಶಾಲೆಗಳು, ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೂ ಜುಲೈ 3ರಂದು ರಜೆ ಅನ್ವಯವಾಗಲಿದೆ. ಜಿಲ್ಲಾಧಿಕಾರಿಗಳು ಈ ಕುರಿತು ಆದೇಶ ಹೊರಡಿಸಿದ್ದು, ಆದೇಶ ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51(ಬಿ) ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಧಾರಾಕಾರ ಮಳೆಯ ಸಾಧ್ಯತೆಯನ್ನು ಗಮನಿಸಿ ತಗ್ಗು ಪ್ರದೇಶಗಳು, ಕೆರೆ, ನದಿ ಹಾಗೂ ಸಮುದ್ರ ತೀರಗಳಿಗೆ ಮಕ್ಕಳು ತೆರಳದಂತೆ ಪಾಲಕರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ. ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು. ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ಮತ್ತು ಸಮುದ್ರ ತೀರಗಳಿಗೆ ಭೇಟಿ ನೀಡದಂತೆ ನಿರ್ಬಂಧ ವಿಧಿಸಲಾಗಿದೆ.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಿ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ನಿರ್ದೇಶನ ನೀಡಲಾಗಿದೆ. ಸಂಬಂಧಪಟ್ಟ ಇಲಾಖೆಗಳು ಪ್ರತಿ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಬೇಕು ಎಂದು ಆದೇಶಿಸಲಾಗಿದೆ.

ನೈಸರ್ಗಿಕ ವಿಕೋಪಕ್ಕೆ ಸಂಬಂಧಿಸಿದ ತುರ್ತು ಸಹಾಯಕ್ಕಾಗಿ ಸಾರ್ವಜನಿಕರು 1077 (ಟೋಲ್ ಫ್ರೀ) ಅಥವಾ 0824-2442590 ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.