ಮೂಡುಬಿದಿರೆ: ಕರ್ನಾಟಕ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿರುವ ಕಾರ್ಮಿಕರ ಕನಿಷ್ಠ ಕೂಲಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ವಸಂತ ಆಚಾರಿ ಆಗ್ರಹಿಸಿದರು.

ಮೂಡುಬಿದಿರೆ ಸಮಾಜ ಮಂದಿರದಲ್ಲಿ ಭಾನುವಾರ ನಡೆದ ಕಾರ್ಮಿಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಲೀಕ ವರ್ಗದ ಒತ್ತಡಕ್ಕೆ ಮಣಿಯದೆ ಸರ್ಕಾರ ಕನಿಷ್ಠ ಕೂಲಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಇನ್ನೂ ಕನಿಷ್ಠ ಕೂಲಿ ಪ್ರಕಟವಾಗದ ಕ್ಷೇತ್ರಗಳಿಗೂ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಬೇಕು ಎಂದರು.

ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕಾರ್ಮಿಕ ಸಂಹಿತೆಯನ್ನು ಟೀಕಿಸಿದ ವಸಂತ ಆಚಾರಿ, ಅದು ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುವ 'ಮರಣ ಸಂಹಿತೆ'ಯಾಗಿದೆ ಎಂದು ಅಭಿಪ್ರಾಯಪಟ್ಟರು.

ಹಿರಿಯ ಮುಂದಾಳು ರಮಣಿ ಸಮಾವೇಶದಲ್ಲಿ ಅತಿಥಿಯಾಗಿ ಮಾತನಾಡಿದರು. ಸಮಾವೇಶದ ಅಧ್ಯಕ್ಷತೆಯನ್ನು ಕಾರ್ಮಿಕ ಮುಂದಾಳು ಶಂಕರ ವಾಲ್ಪಾಡಿ ವಹಿಸಿದ್ದರು. ಸಮಾರೋಪ ಭಾಷಣವನ್ನು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಕೆ. ಯಾದವ ಶೆಟ್ಟಿ ಮಾಡಿದರು. ಗಿರಿಜ, ಲಕ್ಷ್ಮಿ ಹಾಗೂ ಶೋಭಾ ಉಪಸ್ಥಿತರಿದ್ದರು.