ಮೂಡುಬಿದಿರೆ: ಯುವನಿಧಿ ಯೋಜನೆಯಡಿ ಮೂಡುಬಿದಿರೆ ತಾಲೂಕಿನಲ್ಲಿ 302 ಫಲಾನುಭವಿಗಳಿಗೆ ಒಟ್ಟು ₹82,84,500 ಮೊತ್ತವನ್ನು ಡಿ.ಬಿ.ಟಿ. ಮೂಲಕ ಪಾವತಿಸಲಾಗಿದೆ ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ತಿಳಿಸಲಾಯಿತು.

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನೆ ಸಭೆಯು ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜುಲೈ 10ರಂದು ಪಂಚ ಗ್ಯಾರಂಟಿ ಯೋಜನೆ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಗೃಹಜ್ಯೋತಿ ಯೋಜನೆ ಕುರಿತು ಮಾಹಿತಿ ನೀಡಿದ ಮೆಸ್ಕಾಂ ಅಧಿಕಾರಿಗಳು, ಫಲಾನುಭವಿಗಳ ಪರಿಶೀಲನೆ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ನಡೆಯಲಿದ್ದು, ಮೆಸ್ಕಾಂ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಫಲಾನುಭವಿಗಳು ಸರಿಯಾದ ಮಾಹಿತಿಯನ್ನು ನೀಡುವಂತೆ ಹಾಗೂ ಗ್ಯಾರಂಟಿ ಯೋಜನೆಗಳ ಸದಸ್ಯರು ಅಗತ್ಯ ಸಹಕಾರ ನೀಡುವಂತೆ ಅರುಣ್ ಕುಮಾರ್ ಶೆಟ್ಟಿ ತಿಳಿಸಿದರು. ಶಕ್ತಿ ಯೋಜನೆಯಡಿ ವಿದ್ಯಾರ್ಥಿಗಳು ಸೇವಾ ಸಿಂಧು ಮೂಲಕ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡು ಮಂಗಳೂರಿನ ಕರ್ನಾಟಕ ಒನ್ ಕೇಂದ್ರದಲ್ಲಿ ಉಚಿತ ಬಸ್ ಪಾಸ್ ಪಡೆಯಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಯುವನಿಧಿ ಯೋಜನಾಧಿಕಾರಿ ಅರುಣ್ ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಸದಸ್ಯ ಕಾರ್ಯದರ್ಶಿ ಮಹೇಶ್ ಕುಮಾರ್ ಹೊಳ್ಳ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಪಂಚ ಗ್ಯಾರಂಟಿ ಯೋಜನೆಯ ವಿಷಯ ನಿರ್ವಾಹಕಿ ಸುನಂದಾ ಬಿ. ಜೈನ್ ಸ್ವಾಗತಿಸಿ, ವಂದಿಸಿದರು.