ಮೂಡುಬಿದಿರೆ: ಬಾಂಗ್ಲಾದೇಶಿ ಅಕ್ರಮ ವಲಸಿಗರ ಪತ್ತೆ ಹಾಗೂ ಪರಿಶೀಲನೆಗಾಗಿ ಮೂಡುಬಿದಿರೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು.

ಕಟ್ಟಡ ಕಾಮಗಾರಿ ನಡೆಯುತ್ತಿರುವ ಸ್ಥಳಗಳು ಸೇರಿದಂತೆ ವಿವಿಧ ವಲಯಗಳಲ್ಲಿ ಕೆಲಸ ನಿರ್ವಹಿಸುತ್ತಿರುವ 100ಅಧಿಕ ಕಾರ್ಮಿಕರ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸಲಾಯಿತು.

ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಏಕಕಾಲದಲ್ಲಿ ನಡೆಸಲಾದ ಈ ಕಾರ್ಯಾಚರಣೆಯಲ್ಲಿ ಕಟ್ಟಡ ಕಾರ್ಮಿಕರು ಹಾಗೂ ಇತರ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಗುರುತಿನ ದಾಖಲೆಗಳು ಮತ್ತು ಅಗತ್ಯ ಮಾಹಿತಿ ಪರಿಶೀಲಿಸಲಾಯಿತು. ಅನುಮಾನಾಸ್ಪದ ವ್ಯಕ್ತಿಗಳ ಕುರಿತು ಮಾಹಿತಿ ಸಂಗ್ರಹಿಸುವ ಜೊತೆಗೆ ಅಕ್ರಮ ವಲಸಿಗರ ಪತ್ತೆಗೆ ಅಗತ್ಯ ಕ್ರಮಗಳನ್ನು ಪೊಲೀಸರು ಕೈಗೊಂಡರು.

ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ಬಗ್ಗೆ ಯಾವುದೇ ಮಾಹಿತಿ ದೊರೆತರೆ ತಕ್ಷಣವೇ ಪೊಲೀಸ್ ಇಲಾಖೆಗೆ ತಿಳಿಸುವಂತೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ತಪಾಸಣೆ ಮತ್ತು ಪರಿಶೀಲನಾ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.