ಮೂಡುಬಿದಿರೆ: ಮುಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಎಚ್. ವಸಂತ ಬರ್ನಾಡ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಈ ನೇಮಕಾತಿಗೆ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಮಾರ್ಗದರ್ಶನದಲ್ಲಿ, ಕ್ಷೇತ್ರದ ಮಾಜಿ ಸಚಿವ ಕೆ. ಅಭಯ ಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ. ರೈ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಡೆನ್ನಿಸ್ ಡಿಸಿಲ್ವಾ ಅವರ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ನಡೆದಿದೆ.
ವಸಂತ ಬರ್ನಾಡ್ ಕಾಲೇಜು ಜೀವನದಿಂದಲೇ ಸಂಘಟನಾ ಹಾಗೂ ನಾಯಕತ್ವದ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಕೋಶಾಧಿಕಾರಿಯಾಗಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಸುಮಾರು 12 ವರ್ಷಗಳ ಕಾಲ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ತಾಲೂಕು ರಾಜೀವ್ ಗಾಂಧಿ ಪಂಚಾಯಿತಿ ಸಂಘಟನ್ ಪ್ರಧಾನ ಕಾರ್ಯದರ್ಶಿಯಾಗಿ, ಕೆಪಿಸಿಸಿ ಕೋ-ಆರ್ಡಿನೇಟರ್ ಆಗಿ ಹಾಗೂ ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಕೆಪಿಸಿಸಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ರಾಜ್ಯದ ವಿವಿಧ ಉಪಚುನಾವಣೆಗಳಲ್ಲಿ ಸಹಾಯಕ ವೀಕ್ಷಕರಾಗಿ ಕಾರ್ಯನಿರ್ವಹಿಸಿರುವ ಅನುಭವವೂ ವಸಂತ ಬರ್ನಾಡ್ ಅವರಿಗೆ ಇದೆ. ಅಲ್ಲದೆ, ಮುಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣೆಗಳಲ್ಲಿ ಚುನಾವಣಾ ಕಂಟ್ರೋಲ್ ರೂಮ್ ಜವಾಬ್ದಾರಿಯನ್ನು ನಿರ್ವಹಿಸಿ, ಚುನಾವಣಾ ಪ್ರಕ್ರಿಯೆಯನ್ನು ಸುಸೂತ್ರವಾಗಿ ಸಂಯೋಜಿಸಿದ ಅನುಭವವೂ ಇವರಿಗಿದೆ.