ಮೂಡುಬಿದಿರೆ: ಬಂಟ್ವಾಳದ ಬಿ.ಸಿ. ರೋಡ್‌ನಲ್ಲಿ ನಡೆದ ಯುವತಿಯ ಕೊಲೆ ಪ್ರಕರಣದ ಆರೋಪಿ ಚೇತನ್‌ನ ಫೋಟೋವನ್ನು ದುರುದ್ದೇಶಪೂರ್ವಕವಾಗಿ ಎಡಿಟ್ ಮಾಡಿ, ಆತನಿಗೆ ಭಜರಂಗದಳದ ಸಂಘಟನಾತ್ಮಕ ಗುರುತು ನೀಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿರುವ ಆರೋಪದ ಹಿನ್ನೆಲೆಯಲ್ಲಿ, ಫೇಸ್‌ಬುಕ್ ಖಾತೆದಾರ ಶೈಲಜಾ ಅಮರನಾಥ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಮುಲ್ಕಿ–ಮೂಡುಬಿದಿರೆ ಯುವ ಮೋರ್ಚಾ ವತಿಯಿಂದ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಯಿತು.
ಬಿಜೆಪಿ ಮುಲ್ಕಿ–ಮೂಡುಬಿದಿರೆ ಯುವ ಮೋರ್ಚಾ ಅಧ್ಯಕ್ಷ ಕುಮಾರ್ ಪ್ರಸಾದ್ ನೇತೃತ್ವದಲ್ಲಿ ದೂರು ಸಲ್ಲಿಸಲಾಯಿತು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಡುವುದು ಸಾರ್ವಜನಿಕರಲ್ಲಿ ಗೊಂದಲ ಉಂಟುಮಾಡುವುದರ ಜೊತೆಗೆ ಸಂಘಟನೆಗಳ ಪ್ರತಿಷ್ಠೆಗೆ ಧಕ್ಕೆ ಉಂಟುಮಾಡುವ ಕೃತ್ಯವಾಗಿದ್ದು, ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.