ಮೂಡುಬಿದಿರೆ: ಕಂಬಳವನ್ನು ಸಮಯಕ್ಕೆ ಸರಿಯಾಗಿ ಹಾಗೂ ವ್ಯವಸ್ಥಿತವಾಗಿ ನಡೆಸುವ ಮೂಲಕ ಅದರ ಘನತೆಯನ್ನು ಮತ್ತಷ್ಟು ಹೆಚ್ಚಿಸಬೇಕಿದ್ದು, ಈ ನಿಟ್ಟಿನಲ್ಲಿ ಎಲ್ಲ ಯಜಮಾನರು, ತೀರ್ಪುಗಾರರು ಮತ್ತು ಕಂಬಳ ಅಭಿಮಾನಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಜಿಲ್ಲಾ ಕಂಬಳ ಸಮಿತಿ ನಿಕಟಪೂರ್ವ ಅಧ್ಯಕ್ಷ ಡಾ. ಬೆಳಪು ದೇವಿಪ್ರಸಾದ್ ಶೆಟ್ಟಿ ಹೇಳಿದರು.
ಜಿಲ್ಲಾ ಕಂಬಳ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಕಂಬಳದ ವ್ಯವಸ್ಥೆಯಲ್ಲಿ ಅಗತ್ಯ ಬದಲಾವಣೆಗಳನ್ನು ಅಳವಡಿಸಿಕೊಂಡು ಸಮಯ ಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಅನಗತ್ಯ ವಿಳಂಬ ಮತ್ತು ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ದೊಡ್ಡ ಹಾಗೂ ಸಣ್ಣ ಕೋಣಗಳಿಗೆ ಸಮಾನ ಅವಕಾಶ ಕಲ್ಪಿಸಿ ನಿಗದಿತ ಸಮಯದೊಳಗೆ ಕಂಬಳ ಮುಗಿಸುವ ವ್ಯವಸ್ಥೆ ರೂಪಿಸಬೇಕು ಎಂದು ಸಲಹೆ ನೀಡಿದರು.
ಮೈಸೂರು ದಸರಾ ಅಂಗವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಸಕಾರಾತ್ಮಕ ಸ್ಪಂದನೆ ನೀಡಿದ್ದು, ಮುಖ್ಯಮಂತ್ರಿ ನೇತೃತ್ವದ ಪೂರ್ವಭಾವಿ ಸಭೆಯಲ್ಲಿ ಈ ವಿಷಯವನ್ನು ದಸರಾ ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ. ಕಂಬಳ ಆಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಕಂಬಳ ತಜ್ಞರು ಮೈಸೂರಿನಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದು, ಕಂಬಳ ಕರೆ, ಪಾರ್ಕಿಂಗ್ ಹಾಗೂ ಮೂಲಸೌಕರ್ಯಗಳ ಬಗ್ಗೆ ಅಧ್ಯಯನ ಮಾಡಿದ್ದಾರೆ ಎಂದು ತಿಳಿಸಿದರು.
ಮೈಸೂರು ಕಂಬಳ ಕುರಿತು ಅಂತಿಮ ನಿರ್ಧಾರ ಇನ್ನಷ್ಟೇ ಪ್ರಕಟವಾಗಬೇಕಿದ್ದು, ಕಂಬಳ ಯಜಮಾನರು ಹಾಗೂ ಸಂಬಂಧಪಟ್ಟ ಎಲ್ಲರೊಂದಿಗೆ ಸಮಾಲೋಚನೆ ನಡೆಸಿದ ಬಳಿಕವೇ ತೀರ್ಮಾನ ಕೈಗೊಳ್ಳಲಾಗುವುದು. ಯಾವುದೇ ಒತ್ತಡವಿಲ್ಲದೆ ಆಸಕ್ತ ಯಜಮಾನರು ಮಾತ್ರ ಭಾಗವಹಿಸಲಿದ್ದಾರೆ ಎಂದರು.
ಅಕ್ಟೋಬರ್ 18 ಮತ್ತು 19ರಂದು ಮೈಸೂರು ದಸರಾ ಕಂಬಳ ಆಯೋಜಿಸುವ ಉದ್ದೇಶವಿದ್ದು, ಸರ್ಕಾರದ ಮಟ್ಟದಲ್ಲಿ ಶೀಘ್ರವೇ ಅಂತಿಮ ನಿರ್ಧಾರ ಹೊರಬೀಳುವ ನಿರೀಕ್ಷೆಯಿದೆ ಎಂದು ಹೇಳಿದರು. ಕಂಬಳದ ಅಭಿವೃದ್ಧಿಗೆ ಸರ್ಕಾರ ವಿಶೇಷ ಪ್ರೋತ್ಸಾಹ ನೀಡುತ್ತಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 29 ಕಂಬಳಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ತಲಾ ₹5 ಲಕ್ಷ ಅನುದಾನ ಮಂಜೂರಾಗಿದೆ. ಕ್ರೀಡಾ ಇಲಾಖೆಯಿಂದ ಮೂಲಸೌಕರ್ಯ ಅಭಿವೃದ್ಧಿಗೆ ₹2 ಲಕ್ಷ ನೆರವು ದೊರೆಯಲಿದ್ದು, ತೀರ್ಪುಗಾರರು ಹಾಗೂ ಪರಿಚಾರಕರಿಗೆ ವಿಶೇಷ ಕಾರ್ಮಿಕ ಕಾರ್ಡ್ ನೀಡುವ ಯೋಜನೆಯೂ ಜಾರಿಯಾಗುತ್ತಿದೆ ಎಂದು ವಿವರಿಸಿದರು.
ಸರ್ಕಾರದ ಈ ಬೆಂಬಲದಿಂದ ಕಂಬಳದ ಸಂರಕ್ಷಣೆ ಮತ್ತು ಬೆಳವಣಿಗೆಗೆ ಹೊಸ ಉತ್ತೇಜನ ಸಿಗಲಿದ್ದು, ಕರಾವಳಿಯ ಈ ಜನಪದ ಕ್ರೀಡೆಯನ್ನು ಇನ್ನಷ್ಟು ವೈಭವದಿಂದ ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಡಾ. ಬೆಳಪು ದೇವಿಪ್ರಸಾದ್ ಶೆಟ್ಟಿ ಹೇಳಿದರು.
ರಾಜ್ಯ ಕಂಬಳ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಕಂಗಿನಮನೆ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಜಿಲ್ಲಾ ಕಂಬಳ ಸಮಿತಿ ನೂತನ ಅಧ್ಯಕ್ಷ ಚಂದ್ರಹಾಸ ಸನಿಲ್, ನೂತನ್ ಸಮಿತಿಯ ಪಧಾದಿಕಾರಿಗಳು ಉಪಸ್ಥಿತರಿದ್ದರು.