ಮೂಡುಬಿದಿರೆ: ಇಲ್ಲಿನ ಬಸ್ ನಿಲ್ದಾಣದಲ್ಲಿ ತಲವಾರು ಝಳಪಿಸಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಪ್ರಕರಣದ ಆರೋಪಿ ರಾಜೇಶ್‌ಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಶನಿವಾರ ಸಂಜೆ ರಾಜೇಶ್ ಬಸ್ ನಿಲ್ದಾಣದಲ್ಲಿರುವ ಮೊಬೈಲ್ ಅಂಗಡಿಯೊಂದಕ್ಕೆ ತೆರಳಿ, ಅಂಗಡಿಯಲ್ಲಿದ್ದ ಯುವಕನಿಗೆ ತಲವಾರು ತೋರಿಸಿ ಮೊಬೈಲ್ ನೀಡುವಂತೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಇದೇ ವೇಳೆ ಅಲ್ಲಿದ್ದ ಕೆಲವು ಯುವಕರು ಉಪಾಯದಿಂದ ರಾಜೇಶ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಘಟನೆಯಿಂದ ಕೆಲಕಾಲ ಬಸ್ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ರಾಜೇಶ್ ಅಮಲು ಪದಾರ್ಥ ಸೇವಿಸಿದ್ದ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.