ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿರ್ತಾಡಿ ವಲಯ, ಶಿರ್ತಾಡಿ ಘಟಕ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಸರ್ಕಾರಿ ಪ್ರೌಢಶಾಲೆ ಮಕ್ಕಿ ಸಂಯುಕ್ತ ಆಶ್ರಯದಲ್ಲಿ 'ಸ್ವಾಸ್ಥ್ಯ ಸಂಕಲ್ಪ' ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಪನ್ಮೂಲ ವ್ಯಕ್ತಿ ದೇವಿಪ್ರಸಾದ್ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳಿಗೆ ಹೇಗೆ ಬಲಿಯಾಗುತ್ತಾರೆ ಹಾಗೂ ಅವರನ್ನು ದುಶ್ಚಟಗಳಿಂದ ದೂರವಿಡಲು ಕುಟುಂಬ, ಶಾಲೆ ಮತ್ತು ಸಮಾಜದ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು. ಆರೋಗ್ಯಕರ ಜೀವನಶೈಲಿ, ಉತ್ತಮ ಅಭ್ಯಾಸಗಳು ಮತ್ತು ಜಾಗೃತಿಯ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸಾವಿತ್ರಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಇಂತಹ ಜಾಗೃತಿ ಕಾರ್ಯಕ್ರಮಗಳು ನಡೆಯುವುದರಿಂದ ವಿದ್ಯಾರ್ಥಿಗಳು ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರಿಗೆ ಉಪಯುಕ್ತ ಮಾಹಿತಿ ದೊರೆಯುತ್ತದೆ ಎಂದು ಹೇಳಿದರು.

ಒಕ್ಕೂಟದ ಅಧ್ಯಕ್ಷ ಜಯಾನಂದ, ವಲಯದ ಮೇಲ್ವಿಚಾರಕಿ ಪುಷ್ಪ, ಶಾಲೆಯ ಸಹ ಶಿಕ್ಷಕಿಯರು, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು, ಸೇವಾ ಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.