ಮೂಡುಬಿದಿರೆ: ದೆಹಲಿಯಲ್ಲಿ ಸರ್ಕಾರದ ಸರ್ವಾಧಿಕಾರ ಧೋರಣೆ ವಿರುದ್ಧ, ವಿದ್ಯಾರ್ಥಿಗಳ ಹಿತರಕ್ಷಣೆ ಹಾಗೂ ನ್ಯಾಯಕ್ಕಾಗಿ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರ ಮೇಲಿನ ಪೊಲೀಸ್ ದೌರ್ಜನ್ಯ ಖಂಡನೀಯ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ದೆಹಲಿಯಲ್ಲಿ ಅನ್ಯಾಯದ ವಿರುದ್ಧ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿರುವುದು ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರ ಮೇಲಿನ ಪೊಲೀಸ್ ದೌರ್ಜನ್ಯವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳ ನ್ಯಾಯಯುತ ಹೋರಾಟವನ್ನು ದಮನಿಸಲು ಪ್ರಯತ್ನಿಸುವುದು ಮತ್ತು ಹೋರಾಟಗಾರರ ಮೇಲೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೌರ್ಜನ್ಯ ನಡೆಸುತ್ತಿರುವುದು ಖಂಡನೀಯ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕನ್ನು ಗೌರವಿಸಬೇಕು ಹಾಗೂ ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ರಾಜೇಶ್ ಕಡಲಕೆರೆ ಆಗ್ರಹಿಸಿದ್ದಾರೆ.