ಮೂಡುಬಿದಿರೆ: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಜುಲೈ 25ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ವಸತಿ ಶಾಲೆಗಳು ಮತ್ತು ವಸತಿ ಕಾಲೇಜುಗಳಿಗೂ ಆದೇಶ ಅನ್ವಯವಾಗಲಿದ್ದು, ಆದೇಶ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ–2005ರ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಮಕ್ಕಳು ನದಿ, ಕೆರೆ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಪೋಷಕರು ಎಚ್ಚರಿಕೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಹಾಗೂ ಸಾರ್ವಜನಿಕರು ತುರ್ತು ಸಂದರ್ಭದಲ್ಲಿ 1077 ಅಥವಾ 0824-2442590 ಸಂಖ್ಯೆಗೆ ಸಂಪರ್ಕಿಸಲು ಜಿಲ್ಲಾಡಳಿತ ಸೂಚಿಸಿದೆ.