ಮೂಡುಬಿದಿರೆ: ಕಡಂದಲೆ–ಪಾಲಡ್ಕ ಬಂಟರ ಸಂಘದ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವ ಮೂಲಕ ಶಿಕ್ಷಣಕ್ಕೆ ಉತ್ತೇಜನ ನೀಡಲಾಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೆ. ಸುದರ್ಶನ ಶೆಟ್ಟಿ, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವುದು ಸಮಾಜಮುಖಿ ಕಾರ್ಯವಾಗಿದೆ. ಇಂತಹ ಪ್ರೋತ್ಸಾಹದಿಂದ ವಿದ್ಯಾರ್ಥಿಗಳು ಇನ್ನಷ್ಟು ಸಾಧನೆ ಮಾಡಲು ಪ್ರೇರಣೆ ಪಡೆಯುತ್ತಾರೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಗ್ರಾಮ ಪಂಚಾಯಿತಿ ಸದಸ್ಯೆ ಸುನಿತಾ ಸುಚರಿತ ಶೆಟ್ಟಿ ಮಾತನಾಡಿ, ಆಟಿಡೊಂಜಿ ದಿನವು ತುಳುನಾಡಿನ ಸಾಂಪ್ರದಾಯಿಕ ಮತ್ತು ಸಾಂಸ್ಕೃತಿಕ ಆಚರಣೆಗಳಲ್ಲಿ ವಿಶೇಷ ಸ್ಥಾನ ಹೊಂದಿದೆ. ಆಟಿ ತಿಂಗಳಲ್ಲಿ ಆಚರಿಸಲಾಗುವ ಈ ದಿನದ ಮೂಲಕ ಪೂರ್ವಜರ ಸಂಪ್ರದಾಯ, ಗ್ರಾಮೀಣ ಕಲೆ, ಜನಪದ ಆಟಗಳು, ಸ್ಥಳೀಯ ಆಹಾರ ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶವನ್ನು ಸಮಾಜದ ಮುಂದೆ ಇಡಲಾಗುತ್ತದೆ. ಇಂದಿನ ಯುವ ಪೀಳಿಗೆಗೆ ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಪರಿಚಯಿಸುವ ಮಹತ್ವದ ಆಚರಣೆಯಾಗಿದೆ ಎಂದು ತಿಳಿಸಿದರು.
ಉಪಾಧ್ಯಕ್ಷ ವಿಶ್ವನಾಥ ಶೆಟ್ಟಿ, ಪ್ರೇಮ ಶೆಟ್ಟಿ, ನೀರಜಾಕ್ಷಿ ಶೆಟ್ಟಿ, ಜಯಲಕ್ಷ್ಮಿ ಶೆಟ್ಟಿ, ಸಂಸ್ಕೃತಿ ಕಾರ್ಯದರ್ಶಿ ನಾಗರಾಜ್ ಶೆಟ್ಟಿ, ಖಜಾಂಜಿ ವಿವೇಕ್ ಶೆಟ್ಟಿ, ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಆದರ್ಶ್ ಶೆಟ್ಟಿ, ಮಾಜಿ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜಯಶ್ರೀ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸದಸ್ಯರು ಭಾಗವಹಿಸಿದರು.