ಕೈಕಂಬ :ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ-169ರ ಗಂಜಿಮಠ ಸಮೀಪದ ಸೂರಲ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ಟೋಲ್‌ಗೇಟ್ ಪ್ರದೇಶದಲ್ಲಿ ಭಾನುವಾರ ಸಂಜೆ ಸುಮಾರು 5.20ಕ್ಕೆ ಖಾಸಗಿ ಎಕ್ಸ್‌ಪ್ರೆಸ್ ಬಸ್ ರಸ್ತೆ ಬದಿಯ ಸಿಮೆಂಟ್ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.

ಕಾರ್ಕಳದಿಂದ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಸೂರಲ್ಪಾಡಿ ಸಮೀಪ ಸಾಗುತ್ತಿದ್ದ ವೇಳೆ ಮುಂಭಾಗದಲ್ಲಿ ಸಂಚರಿಸುತ್ತಿದ್ದ ಟಿಪ್ಪರ್ ಲಾರಿಯು ಏಕಾಏಕಿ ಎಡಭಾಗಕ್ಕೆ ತಿರುಗಿದೆ. ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಬಸ್ ಅನ್ನು ಬಲಭಾಗಕ್ಕೆ ತಿರುಗಿಸಿದಾಗ ವಾಹನದ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಸಿಮೆಂಟ್ ಬ್ಯಾರಿಕೇಡ್‌ಗೆ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಗಾಯಗೊಂಡ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿಗೆ ಸ್ಥಳೀಯರು ತಕ್ಷಣ ನೆರವು ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಜ್ಪೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ ಸುಮಾರು 35 ಮಂದಿ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಹೆಚ್ಚಿನ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಥಳೀಯರ ಪ್ರಕಾರ, ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಈ ಪ್ರದೇಶದಲ್ಲಿ ಸಮರ್ಪಕ ಸುರಕ್ಷತಾ ಕ್ರಮಗಳು, ವಾಹನ ಸಂಚಾರಕ್ಕೆ ಅಗತ್ಯ ಮಾರ್ಗದರ್ಶನ ಹಾಗೂ ಸೂಚನಾ ಫಲಕಗಳ ಕೊರತೆಯಿಂದ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿವೆ. ಬಸ್ ಇನ್ನಷ್ಟು ಮುಂದಕ್ಕೆ ಚಲಿಸಿದ್ದರೆ ಅಪಘಾತದ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇತ್ತು ಎಂದು ಪ್ರತ್ಯಕ್ಷದರ್ಶಿ ಸಮೀರ್ ಸೂರಲ್ಪಾಡಿ ತಿಳಿಸಿದ್ದಾರೆ.

ಕಾಮಗಾರಿ ಅವ್ಯವಸ್ಥೆಗೆ ಆಕ್ರೋಶ ಸೂರಲ್ಪಾಡಿ ಟೋಲ್‌ಗೇಟ್ ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ಸುರಕ್ಷತಾ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕಲ್ಪಿಸದಿರುವುದು ಹಾಗೂ ವಾಹನ ಸಂಚಾರ ನಿರ್ವಹಣೆಯಲ್ಲಿ ಲೋಪವಾಗಿರುವುದರಿಂದ ಪದೇಪದೆ ಅಪಘಾತಗಳು ಸಂಭವಿಸುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಅಪಘಾತಗಳಿಗೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.