ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮೂಡುಬಿದಿರೆ ಹಾಗೂ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ, ಕಲ್ಲಬೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ 2026–27ನೇ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಕಲ್ಲಬೆಟ್ಟುವಿನ ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.

ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್. ಎನ್., ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಯ ಮತ್ತೊಂದು ಹೆಸರಾಗಿದ್ದು, ಶಿಕ್ಷಣ ಇಲಾಖೆಯ ಆಶಯಗಳಿಗೆ ಸದಾ ಸ್ಪಂದಿಸುತ್ತಾ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸುತ್ತಿವೆ. ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕ್ರೀಡಾ ಸೌಲಭ್ಯಗಳನ್ನು ಕಲ್ಪಿಸಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಸೂಕ್ತ ಅವಕಾಶ ಒದಗಿಸಿರುವುದು ಶ್ಲಾಘನೀಯ ಎಂದು ಹೇಳಿದರು.

ಕ್ರೀಡೆ ಕೇವಲ ಪದಕ ಅಥವಾ ಬಹುಮಾನ ಗಳಿಸುವ ಸಾಧನವಲ್ಲ, ವ್ಯಕ್ತಿತ್ವ ನಿರ್ಮಾಣದ ಶ್ರೇಷ್ಠ ಮಾಧ್ಯಮವಾಗಿದೆ. ಶಿಸ್ತು, ಸಮಯಪಾಲನೆ, ಆತ್ಮವಿಶ್ವಾಸ, ಸಹಕಾರ ಮನೋಭಾವ ಹಾಗೂ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಗುಣವನ್ನು ಕ್ರೀಡೆ ಬೆಳೆಸುತ್ತದೆ. ಶಿಕ್ಷಣ ಮತ್ತು ಕ್ರೀಡೆ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿಯಾಗಿವೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಶಿಕ್ಷಣ ಮತ್ತು ಕ್ರೀಡೆ ಎರಡರಲ್ಲೂ ಯಶಸ್ಸು ಸಾಧಿಸಲು ಶಿಸ್ತು, ನಿರಂತರ ಅಭ್ಯಾಸ ಹಾಗೂ ಕಠಿಣ ಪರಿಶ್ರಮ ಅಗತ್ಯವಾಗಿದೆ. ವಿದ್ಯಾರ್ಥಿಗಳು ದೊರೆಯುವ ಪ್ರತಿಯೊಂದು ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಾಲೂಕು ಮಟ್ಟದಿಂದ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸಾಧನೆಯತ್ತ ಹೆಜ್ಜೆಯಿಡಬೇಕು. ವಿದ್ಯಾರ್ಥಿಗಳ ಸಾಧನೆಯೇ ಕುಟುಂಬ, ಶಾಲೆ ಹಾಗೂ ಸಮಾಜದ ಹೆಮ್ಮೆಯಾಗಬೇಕು ಎಂದು ಶುಭ ಹಾರೈಸಿದರು.

ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಪರಿವೀಕ್ಷಣಾಧಿಕಾರಿ ವಿಷ್ಣು ಹೆಬ್ಬಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಹಾಗೂ ನಗರ ಪ್ರದೇಶಗಳ ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಬೆಳೆಸುವಲ್ಲಿ ಇಂತಹ ಪಂದ್ಯಾವಳಿಗಳ ಮಹತ್ವವನ್ನು ವಿವರಿಸಿದರು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರಿತೇಶ್ ಶೆಟ್ಟಿ, ಮೂಡುಬಿದಿರೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಧೀರ್ ಕುಮಾರ್, ಗ್ರೇಡ್–1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಅಂಬೂರಿ ಹಾಗೂ ಗ್ರೇಡ್–2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿನ್ನಿಫ್ರೆಡ್ ಪಿಂಟೋ ಉಪಸ್ಥಿತರಿದ್ದು ಸ್ಪರ್ಧಿಗಳಿಗೆ ಶುಭ ಕೋರಿದರು.

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್ ಸ್ವಾಗತಿಸಿದರು. ಶಿಕ್ಷಕಿ ವನಿತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.