ಮೂಡುಬಿದಿರೆ: ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಮತ್ತು ಆದಿದ್ರಾವಿಡ ಮಹಿಳಾ ತಾಲೂಕು ಸಮಿತಿ ಇದರ ಸಂಯುಕ್ತಾಶ್ರಯದಲ್ಲಿ, ಮಾಸ್ತಿಕಟ್ಟೆ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಸಂಘದ ಅಧ್ಯಕ್ಷರಾದ ಶಿವರಾಮ್ ಆನಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆದಿ ದ್ರಾವಿಡ ಮಹಾ ಮಂಡಲದ ಸ್ಥಾಪಕಾಧ್ಯಕ್ಷರಾದ ಶೀನ ಮಾಸ್ತಿಕಟ್ಟೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದ ಸೋಮಪ್ಪ ಆಲಂಗಾರು, ಅಂಬೇಡ್ಕರ್ ಅವರ ಜೀವನ ಚರಿತ್ರೆ, ಹೋರಾಟದ ಹಾದಿ ಹಾಗೂ ಅವರು ದೇಶಕ್ಕೆ ನೀಡಿದ ಸಂವಿಧಾನದ ಕೊಡುಗೆಯನ್ನು ಸ್ಮರಿಸಿದರು. ಅಂಬೇಡ್ಕರ್ ಅವರ ವಿಚಾರಧಾರೆಗಳು ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಬೇಕು ಎಂದು ಅವರು ಕರೆ ನೀಡಿದರು. ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷರಾದ ಗಣೇಶ ಪ್ರಸಾದ್, ಜಿಲ್ಲಾಧ್ಯಕ್ಷರಾದ ಶ್ರೀನಿವಾಸ ಅರ್ಬಿಗುಡ್ಡೆ, ಜಿಲ್ಲಾ ಉಪಾಧ್ಯಕ್ಷರಾದ ರವೀಂದ್ರ ಕಲ್ಲಮುಂಡ್ಕೂರು, ಮೂಡುಬಿದಿರೆ ತಾಲೂಕು ಗೌರವಾಧ್ಯಕ್ಷರಾದ ಶ್ರೀನಿವಾಸ ಪಾಳ್ಯ, ಆದಿದ್ರಾವಿಡ ಮಹಿಳಾ ಸೇವಾ ಸಂಘದ ಅಧ್ಯಕ್ಷರಾದ ಕುಸುಮ, ನಿವೃತ್ತ ಪ್ರಾಂಶುಪಾಲರು ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಆನಂದ ಕಾರ್ಲ ಮತ್ತು SCDCC ಬ್ಯಾಂಕ್ ಕೈಕಂಬ ಶಾಖೆಯ ಮ್ಯಾನೇಜರ್ ಶಂಕರ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಆದಿದ್ರಾವಿಡ ಸಮಾಜದವರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಅಲ್ಲದೆ, ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭಾವಂತರನ್ನು ಸನ್ಮಾನಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಗಣೇಶ್ ಬೆಳುವಾಯಿ ಪ್ರಾರ್ಥಿಸಿದರು, ನಿಶ್ಮಿತ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. ಶೇಖರ್ ಎಂ ಸ್ವಾಗತಿಸಿದರು. ನವೀನ್ ಆಲಂಗಾರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.