ಮೂಡುಬಿದಿರೆ: ಪುಚ್ಚೆಮೊಗರು ಬಾವದಬೈಲು ಪ್ರದೇಶದಲ್ಲಿ ದೈವರ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ಎಂಟು ಮಂದಿ ಗಾಯಗೊಂಡ ಘಟನೆ ವರದಿಯಾಗಿದೆ.

ಬಾವದಗುತ್ತುವಿನಿಂದ ಧರ್ಮನೇಮಕ್ಕೆ ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆ ಸಾಗಿಸುತ್ತಿದ್ದಾಗ, ಕಾಲು ಸಂಕ (ಬೀಮ್) ಮುರಿದು ಪಲ್ಲಕ್ಕಿ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಕೊಂಬು ಮತ್ತು ಬ್ಯಾಂಡ್ ವಾದ್ಯಗಳೊಂದಿಗೆ ಮೆರವಣಿಗೆ ನಡೆಯುತ್ತಿತ್ತು.

ಅವಘಡದಲ್ಲಿ ಸುನಿಲ್ ಶೆಟ್ಟಿ ಮುಕಾಲ್ದಿ, ಮಾರೂರು, ಲೋಕೇಶ್ ಭಂಡಾರಿ ಸೇರಿದಂತೆ ಪಲ್ಲಕ್ಕಿ ಹೊತ್ತವರನ್ನೂ ಒಳಗೊಂಡು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ಸಂಕ ಮುರಿದು ಬೀಮ್ ಪಲ್ಲಕ್ಕಿ ಹೊತ್ತವರ ಮೇಲೆ ಬಿದ್ದ ಪರಿಣಾಮ, ಪಲ್ಲಕ್ಕಿಯಲ್ಲಿದ್ದ ಮೊಗಮೂರ್ತಿ ಹಾಗೂ ಇತರ ಧಾರ್ಮಿಕ ಪರಿಕರಗಳು ಕೆಳಕ್ಕೆ ಬಿದ್ದಿವೆ. ಪಲ್ಲಕ್ಕಿ ಹೊತ್ತವರು ಅದರಡಿಯಲ್ಲಿ ಸಿಲುಕಿ ಗಾಯಗೊಂಡಿದ್ದಾರೆ.

ಘಟನೆ ತಿಳಿದ ಕೂಡಲೇ ಸ್ಥಳೀಯರು ತಕ್ಷಣ ಧಾವಿಸಿ ಗಾಯಾಳುಗಳನ್ನು ರಕ್ಷಿಸಿ, ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಾಯ ಮಾಡಿದ್ದಾರೆ. ಗಾಯಾಳುಗಳು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.