ಮೂಡುಬಿದಿರೆ: ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಜರುಗಿಸಲಾಗಿದ್ದು, ರಸ್ತೆ ಬದಿ ಕಸ ಎಸೆಯುವುದು ಹಾಗೂ ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಪಂಚಾಯತ್ ಪತ್ರಿಕಾ ಪ್ರಕಟಣೆಯ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದು, ನಿಯಮಗಳನ್ನು ಉಲ್ಲಂಘಿಸುವವರಿಗೆ 1,000 ರೂಪಾಯಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದೆ. ಗ್ರಾಮದ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಗೂ ನಿಷೇಧ ಹೇರಲಾಗಿದ್ದು, ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಸುವುದು ಕಂಡುಬಂದಲ್ಲಿಯೂ ದಂಡದ ಕ್ರಮ ಕೈಗೊಳ್ಳಲಾಗುವುದು. ಈ ಆದೇಶವನ್ನು ಪಾಲಿಸದಿದ್ದರೆ ಅಂತಹವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗುವುದು ಎಂದು ಪಂಚಾಯತ್ ತಿಳಿಸಿದೆ. ಅಲ್ಲದೆ, ರಸ್ತೆ ಬದಿ ತ್ಯಾಜ್ಯ ಎಸೆಯುವವರ ಕುರಿತು ಸೂಕ್ತ ಸಾಕ್ಷ್ಯಾಧಾರಗಳೊಂದಿಗೆ ಮಾಹಿತಿ ನೀಡುವ ನಾಗರಿಕರಿಗೆ ಗ್ರಾಮ ಪಂಚಾಯತ್ ವತಿಯಿಂದ ಬಹುಮಾನ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.